ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜನವರಿ 3 ಮತ್ತು 4 ರಂದು ಕಲಬುರಗಿಯಲ್ಲಿ ಜರಗುವ 36 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ..!
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಜರಗುವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಶ್ರೀ ಶರಣಬಸವೇಶ್ವರ ಸಂಸ್ಥಾನ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ ದಿವ್ಯ ಸಾನಿಧ್ಯವಹಿಸುವರು. ಸಮಾರೋಪ ಸಮಾರಂಭದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿನಂದನೆ ಆಶಯ ನುಡಿಗಳನ್ನು ನುಡಿಯಲಿದ್ದಾರೆ.
ಸಚಿವರಾದ ಗೋವಿಂದ ಕಾರಜೋಳ, ಮುರಗೇಶ ನಿರಾಣಿ, ಸಿ.ಸಿ.ಪಾಟೀಲ, ಡಾ.ಸಿ.ಎನ್.ಅಶ್ವಥ್ ನಾರಾಯಣ, ಶಿವರಾಮ್ ಹೆಬ್ಬಾರ್, ಗೋಪಾಲಯ್ಯ ಮತ್ತು ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಸೇರಿದಂತೆ ಶಾಸಕರು, ನಾಡಿನ ಖ್ಯಾತನಾಮ ಪತ್ರಕರ್ತರು, ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಭಾಗವಹಿಸಲಿದ್ದಾರೆ.
ಪತ್ರಿಕೋದ್ಯಮದಲ್ಲಿ ವಿಶಿಷ್ಟ ಸಾಧನೆಗೈದ ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗುಲಿದೆ. ಡಿಜಿಟಲ್ ಮಾಧ್ಯಮದ ಸ್ಥಿತ್ಯಂತರಗಳು, ಮಾಧ್ಯಮ ಮತ್ತು ಸರಕಾರ – ಸವಾಲುಗಳು, ಮಹಿಳೆ ಮತ್ತು ಸವಾಲುಗಳು ಎಂಬ ಗೋಷ್ಠಿಗಳು ಜರಗುಲಿವೆ.
ನಾಡಿನ ವಿವಿಧ ಭಾಗಗಳಿಂದ ಆಗಮಿಸುವ ಪತ್ರಕರ್ತರಿಗೆ ಕಲಬುರಗಿ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಸಮ್ಮೇಳನದಲ್ಲಿ ಹಮ್ಮಿಕೊಳ್ಳಲಾಗಿದೆ..!!