ಅಧಿಕಾರಿಗಳು ಕ್ಷೇತ್ರ ಕಾರ್ಯಕ್ಕೆ ನಿರ್ಲಕ್ಷ್ಯ ತೋರಿದರೆ ಕೆಟ್ಟ ಪರಿಸ್ಥಿತಿ ಅನುಭವಿಸುವುದು ಖಚಿತ : ಸಚಿವ ತಂಗಡಗಿ ಎಚ್ಚರಿಕೆ!

ಸಂಗಮೇಶ ಮುಶಿಗೇರಿ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ: ಜಿಲ್ಲೆಯ ಕುಷ್ಟಗಿ-ಯಲಬುರ್ಗಾ ತಾಲೂಕುಗಳು ಒಣ ಬೇಸಾಯ ಪ್ರದೇಶಗಳಾಗಿದ್ದು, ಇಲ್ಲಿ ಬರ ಆವರಿಸಿದೆ. ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಕ್ಷೇತ್ರ ಕಾರ್ಯ ಮಾಡದೇ ನಿರ್ಲಕ್ಷ್ಯ ತೋರಿದರೆ ಕೆಟ್ಟ ಪರಿಸ್ಥಿತಿ ಅನುಭವಿಸುವುದು ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಖಡಕ್ಕಾಗಿ ಸೂಚಿಸಿದರು.

ಜಿಲ್ಲೆಯ ಕುಷ್ಟಗಿ ಪಟ್ಟಣದ ಸರ್ಕ್ಯೂಟ್ ಹೌಸ್’ನಲ್ಲಿ ಮಂಗಳವಾರ, ಬರಗಾಲ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಸಚಿವರು, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕೃಷಿ ಅಧಿಕಾರಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಬೆಳೆ ಸಮೀಕ್ಷೆ ಕುರಿತು ಕ್ಷೇತ್ರ ಕಾರ್ಯದ ಸಮರ್ಪಕ ವರದಿ ನೀಡದ ಹಿನ್ನೆಲೆ ಹಾಗೂ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಕುರಿತು ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ತಾಲೂಕು ಪಂಚಾಯಿತಿ, ತಾಲೂಕು ಆಡಳಿತ, ಜೆಸ್ಕಾಂ ಇಲಾಖೆ, ಜಿಲ್ಲಾ ಪಂಚಾಯಿತಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕುಡಿಯುವ ನೀರಿಗೆ ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲೆಯಲ್ಲಿ ಕುಷ್ಟಗಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹಳಷ್ಟಿದೆ. ಕುಡಿಯುವ ನೀರಿನ ವಿಷಯದಲ್ಲಿ ನಿರ್ಲಕ್ಷ್ಯ ತೋರುವಂತಿಲ್ಲ. ಜೊತೆಗೆ ಇಲ್ಲಸಲ್ಲದ ನೆಪ ಹೇಳುವಂತಿಲ್ಲ. ಈ ವಿಷಯದಲ್ಲಿ ರಾಜಿಮಾಡಿಕೊಳ್ಳುವ ಮಾತೇ ಇಲ್ಲ. ತಹಸೀಲ್ದಾರ್ ಕೂಡ ತಾಲೂಕಿನ ಪ್ರತಿ ಹಳ್ಳಿಗಳ ಪ್ರವಾಸ ಕೈಗೊಳ್ಳಬೇಕು. ಬರ ಹಾಗೂ ಜನ ಜಾನುವಾರುಗಳ ಪರಿಸ್ಥಿತಿ ಅರಿಯಬೇಕು. ತಾಲೂಕು ಪಂಚಾಯಿತಿ ಇಓ ಪ್ರತಿ ಹಳ್ಳಿಗಳಲ್ಲಿ ಪ್ರತಿ ವಾರ ಮೂರು ದಿನ ಭೇಟಿ ನೀಡಿ ಮೂಲಸೌಕರ್ಯ ಕೊರತೆ ಬಗ್ಗೆ ಪರಿಶೀಲನೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು. ಅದೇರೀತಿ
ತಾಪಂ, ಜೆಸ್ಕಾಂ, ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ನೈರ್ಮಲ್ಯ ಇಲಾಖೆ, ಪುರಸಭೆ, ಕಂದಾಯ ಇಲಾಖೆ ಅಧಿಕಾರಿಗಳು ಪ್ರತಿ ವಾರ ಸಭೆ ನಡೆಸಬೇಕು. ಸಮಸ್ಯೆಗಳ ಕುರಿತು ಮಾಧ್ಯಮಗಳಲ್ಲಿ ಬರದಂತೆ ಕರ್ತವ್ಯ ನಿಭಾಯಿಸಬೇಕು
ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರತಿ ವಾರ್ಡಗಳಿಗೆ ಭೇಟಿ ನೀಡಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ತಾಲೂಕಿನಾದ್ಯಂತ ಕುಡಿಯುವ ನೀರಿಗೆ ವಿದ್ಯುತ್ ಸಮಸ್ಯೆಯಾಗಬಾರದು. ವಿದ್ಯುತ್ ಪರಿವರ್ತಕಗಳು ದುರಸ್ತಿಗೆ ಬಾರದಂತೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಕುಷ್ಟಗಿ ತಾಲೂಕು ಒಣಬೇಸಾಯ ಭೂಮಿ ಹೊಂದಿದ್ದರಿಂದ ಇಲ್ಲಿನ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನಿರ್ವಹಣೆಗೆ ಅಣಿಯಾಗಬೇಕು. ಕಾರಣ ನೆಪ ಹೇಳಿದರೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ತಾಲೂಕಿನ ಆರೋಗ್ಯ ಕೇಂದ್ರಗಳ ವರದಿ ಪಡೆದ ಸಚಿವ ತಂಗಡಗಿ, ವೈದ್ಯರ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುವುದು. ಸಾಂಕ್ರಾಮಿಕ ರೋಗಗಳ ಹಾತೋಟಿಗೆ ಮುಂದಾಗಬೇಕು. ಕುಡಿಯುವ ನೀರಿನ ಗುಣಮಟ್ಟತೆ ಕುರಿತು ಜಾಗೃತಿ ಮೂಡಿಸಬೇಕು. ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೆಯಿಸುವ ಕೊಳವೆಬಾವಿ ನೀರು ಪರೀಕ್ಷೆ ನಡೆಸಲು ಇಒ ಹಾಗೂ ಆರೋಗ್ಯಾಧಿಕಾರಿ ಮುಂದಾಗಬೇಕು ಎಂದ ಸಚಿವ ತಂಗಡಗಿ ಅವರು
ಕಾರಣ ತಿಳಿಸದೇ ಸಭೆಗೆ ಗೈರುಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ತಾಪಂ ಇಓ ಹಾಗೂ ತಹಸೀಲ್ದಾರ್ ಅವರಿಗೆ ಸೂಚಿಸಿದರು.

ಸಭೆಯಲ್ಲಿ ಶಾಸಕ ದೊಡ್ಡನಗೌಡ ಪಾಟೀಲ್, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ತಹಸೀಲ್ದಾರ್ ಶೃತಿ ಮಳ್ಳಪ್ಪಗೌಡರ್, ಇಒ ಶಿವಪ್ಪ ಸುಬೇದಾರ ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಅಧಿಕಾರಿಗಳು ಸಾರ್ವಜನಿಕರ ಕುಂದು-ಕೊರತೆ ಆಲಿಸಲು ಪ್ರತಿ ದಿನ ಎರಡು ಗಂಟೆ ಸಮಯ ಮೀಸಲಿಡಿ. ಪ್ರತಿ ಇಲಾಖೆಯಲ್ಲಿ ಸಮಯ ನಿಗದಿಪಡಿಸಿದ ಫಲಕ ಅಳವಡಿಸಬೇಕು. ಆ ಸಮಯದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಸಾರ್ವಜನಿಕರಿಗೆ ಲಭ್ಯವಿರಬೇಕು.

ಶಿವರಾಜ ತಂಗಡಗಿ,
ಜಿಲ್ಲಾ ಉಸ್ತುವಾರಿ ಸಚಿವ, ಕೊಪ್ಪಳ.