ಸಂಗಮೇಶ ಮುಶಿಗೇರಿ
ಕೃಷಿಪ್ರಿಯ ನ್ಯೂಸ್ |
ಕುಷ್ಟಗಿ : ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಸೋಮವಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಆದ ಸರಸ್ವತಿ ದೇವಿ ಅವರು ಶ್ರಮದಾನ ಮಾಡುವ ಮೂಲಕ ಚಾಲನೆ ನೀಡಿದರು.
ತೆರೆದ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ನೆರವೇರಿಸುವ ಮೂಲಕ ಗೌ,ವಿಸಲಾಗಯಿತು. ಬಳಿಕ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಪುರಸಭೆ ಕಾರ್ಯಾಲಯ, ತಾಲೂಕು ನ್ಯಾಯವಾದಿಗಳ ಸಂಘ ಇವರುಗಳ ಸಹಯೋಗದಲ್ಲಿ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನದಡಿ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ ಕೈಗೊಳ್ಳುವುದರ ಮೂಲಕ ಅರ್ಥಪೂರ್ಣವಾಗಿ ಜಯಂತಿ ಆಚರಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಆದ ಸರಸ್ವತಿ ದೇವಿ ಅವರು ಒಳಗೊಂಡಂತೆ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಆದ ಸತೀಶ್ ಬಿ. ಹಾಗೂ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮಹಾಂತೇಶ ಸೇರಿದಂತೆ ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರಕುಮಾರ ಹಾಗೂ ವಕೀಲರ ಸಂಘವವರು ನ್ಯಾಯಾಲಯದ ಆವರಣದಲ್ಲಿ ಪ್ಲಾಸ್ಟಿಕ್, ಕಸಕಡ್ಡಿ ತೆಗೆದುಹಾಕಿ ಸ್ವಚ್ಛಗೊಳಿಸುವುದರ ಮೂಲಕ ಇತರರಿಗೆ ಮಾದರಿಯಾದರು.
ಸಹಾಯಕ ಸರಕಾರಿ ಅಭಿಯೋಜಕ ರಾಯನಗೌಡರು, ಪುರಸಭೆ ಆರೋಗ್ಯ ನೀರಿಕ್ಷಕ ಪ್ರಾಣೇಶ ಬಳ್ಳಾರಿ, ವಕೀಲರ ಸಂಘದ ಉಪಾಧ್ಯಕ್ಷ ಶಿವುಕುಮಾರ ದೊಡ್ಡಮನಿ ಹಾಗೂ ವಕೀಲರ ಸಂಘದ ಸರ್ವ ಸದಸ್ಯರು, ನ್ಯಾಯಾಲಯಗಳ ಶಿರಸ್ತೆದಾರರು ಮತ್ತು ನ್ಯಾಯಾಲಯದ ಸಿಬ್ಬಂದಿ ವರ್ಗ ಸೇರಿದಂತೆ ಪೌರಕಾರ್ಮಿಕರು ಸ್ವಚ್ಛತಾ ಶ್ರಮದಾನದಲ್ಲಿ ಅಧಿಕಾರಿಗಳೊಂದಿಗೆ ಕೈಜೋಡಿಸಿದರು.