ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ : ಕಾರ್ಯಕರ್ತರಿಂದ ಸಂಭ್ರಮಾಚರಣೆ

ಶರಣು ಚೆನ್ನದಾಸರ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಆಯ್ಕೆಯಾದ ಪ್ರಯುಕ್ತ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಬಿಜೆಪಿ ಮಂಡಲ ಕಾರ್ಯಕರ್ತರು ಶುಕ್ರವಾರ ರಾತ್ರಿ ಪಟಾಕಿ ಸಿಡಿಸಿ ಸಿಸಿ ಹಂಚಿ ಸಂಭ್ರಮಾಚರಿಸಿದರು.

ಪಟ್ಟಣದ ಮಾರುತಿ ವೃತ್ತದಲ್ಲಿ ಸಮಾವೇಶಗೊಂಡ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿ ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ರವಿಕುಮಾರ ಹಿರೇಮಠ ಅವರು, ಬಿಜೆಪಿ ಹೈಕಮಾಂಡ್ ವರಿಷ್ಠರು ಬಿ.ಎಸ್.ವೈ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ರಾಜ್ಯ ಬಿಜೆಪಿ ಪಕ್ಷಕ್ಕೆ ಆನೆಬಲ ಬಂದಂತಾಗಿದೆ. ವಿಜಯೇಂದ್ರ ಅವರ ನೇತೃತ್ವದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳು ಬಿಜೆಪಿಗೆ ಒಲಿಯಲಿದೆ. ಜೊತೆಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಹರ್ಷವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಗಂಗಾಧರಯ್ಯಸ್ವಾಮಿ ಕೆ.ಹಿರೇಮಠ, ಮಂಡಲ ಕಾರ್ಯದರ್ಶಿ ಚಂದ್ರಕಾಂತ ವಡ್ಡಿಗೇರಿ, ಶಶಿಧರ ಕವಲಿ, ವೀರೇಶ ಬಂಗಾರಶೆಟ್ಟರ್, ಪುರಸಭೆ ಸದಸ್ಯ ಅಂಬಣ್ಣ ಭಜಂತ್ರಿ ಸೇರಿದಂತೆ ಇತರರಿದ್ದರು.