ಸಂಗಮೇಶ ಮುಶಿಗೇರಿ
ಕೃಷಿಪ್ರಿಯ ನ್ಯೂಸ್ |
ಬಿಜೆಪಿ ಪಕ್ಷದ ಆಂತರಿಕ ವಿಷಯಗಳ ಕುರಿತು ಮಾತನಾಡಲು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಯಾರು ಎಂದು ಸ್ಥಳೀಯ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ದೊಡ್ಡನಗೌಡ ಎಚ್ ಪಾಟೀಲ್ ಅವರು ಪ್ರಶ್ನಿಸಿದ್ದಾರೆ.
ಅವರು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಕುಷ್ಟಗಿ ಪಟ್ಟಣಕ್ಕೆ ಮೊದಲ ಬಾರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರು ಯಡಿಯೂರಪ್ಪ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ಆಡಳಿತದ ವೇಳೆ 40 ಸಾವಿರ ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂಬ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆಯಿಂದ ಬಿಜೆಪಿ 40ರಷ್ಟು ಕಮೀಷನ್ ಸರ್ಕಾರ ಎಂಬುದು ಸಾಬೀತಾಗಿದೆ. ಯತ್ನಾಳ ಹೇಳಿಕೆಯನ್ನು ಸ್ವಾಗತಿಸಿ ಈ ಹಗರಣ ಬಗ್ಗೆ ತನಿಖೆಯಾಗಬೇಕು ಎಂದಿರುವ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ವಿರೋಧ ಪಕ್ಷದ ಅನಿಸಿಕೆಯಾಗಿದೆ ಎಂದರು. ಬಿಜೆಪಿ ಸರ್ಕಾರದ ವಿರುದ್ಧ ಸ್ವಪಕ್ಷದ ನಾಯಕ ಯತ್ನಾಳ ನೀಡಿದ ಹೇಳಿಕೆಯಿಂದ ಬಿಜೆಪಿ ಪಕ್ಷಕ್ಕೆ ಡ್ಯಾಮೆಜ್ ಅಲ್ಲದೇ ಇದರಿಂದ ಲೋಕಸಭೆ ಚುನಾವಣೆಗೂ ಎಫೆಕ್ಟ್ ಆಗಲಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ದೊಡ್ಡನಗೌಡರು, ಬಸನಗೌಡ ಪಾಟೀಲ್ ಯತ್ನಾಳ ಅವರು ಪಕ್ಷದ ಹಿರಿಯರಿದ್ದಾರೆ. ಅವರ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನಕೈಗೊಳ್ಳುತ್ತದೆ ಎಂದರು.
ಬಿಜೆಪಿ ಹಿರಿಯರು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ತಮಗೆ ವಿಧಾನಸಭಾ ವಿರೋಧಪಕ್ಷದ ಮುಖ್ಯ ಸಚೇತಕ ಜವಾಬ್ದಾರಿ ಸ್ಥಾನ ಕೊಟ್ಟಿದ್ದಾರೆ. ಇದಕ್ಕೆ ಕುಷ್ಟಗಿ ಕ್ಷೇತ್ರದ ಜನರ ಆಶೀರ್ವಾದ ಕಾರಣ. ಅವರ ಆಶೀರ್ವಾದದಿಂದಲೇ ಮೂರು ಬಾರಿ ಕ್ಷೇತ್ರದ ಶಾಸಕನಾಗಿದ್ದೇನೆ. ಜೊತೆಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನದ ಮುಖ್ಯ ಸಚೇತಕ ಸ್ಥಾನ ದೊರೆತಿದೆ. ಈ ಸ್ಥಾನ ಬಳಸಿಕೊಳ್ಳುವ ಮೂಲಕ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡುವತ್ತ ಗಮನ ಹರಿಸುತ್ತೇನೆ ಎಂದು ಹೇಳಿದರು.
ಈ ವೇಳೆ ಬಿಜೆಪಿ ತಾಲೂಕಾಧ್ಯಕ್ಷ ಬಸವರಾಜ ಹಳ್ಳೂರು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಮಹೇಶ, ಮುಖಂಡರಾದ ಸಂಗನಗೌಡ ಜೇನರ್, ಮಲ್ಲಣ್ಣ ಪಲ್ಲೇದ, ಚಂದ್ರಕಾಂತ ವಡ್ಡಿಗೇರಿ, ತುಕಾರಾಮ ಸುರ್ವೆ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.